ಬಳ್ಳಾರಿ : ಜಿಲ್ಲೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳಿಗೆ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಅನುದಾನವನ್ನು ಸಮಪರ್ಕವಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬುಧವಾರದಂದು, ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿಗೆ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಅನುದಾನವನ್ನು ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಉಪಯೋಗಿಸುತ್ತಿದ್ದು, ಪ್ರಗತಿಯಲ್ಲಿ ಹಿನ್ನಡೆಯಾಗಬಾರದು ಮತ್ತು ಉದ್ದೇಶಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಜಿಲ್ಲೆಯ ಒಟ್ಟು ಎಸ್‍ಸಿಎಸ್‍ಪಿ ಅನುದಾನ ರೂ.6431.92 ಲಕ್ಷ ಅನುದಾನ ಬಿಡುಗಡೆಯಾಗಿದೆ. ಅದೇ ರೀತಿಯಾಗಿ ಟಿಎಸ್‍ಪಿ ರೂ.6744.46 ಲಕ್ಷ ಅನುದಾನ ಬಿಡುಗಡೆಯಾಗಿದೆ. ಈ ಅನುದಾನವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಡಬೇಕು. ಯಾವುದೇ ರೀತಿಯಲ್ಲಿ ಹಣ ಪೋಲಾಗುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳ ಯೋಜನೆಗಳಿಗಾಗಿ ಹಣ ಬಿಡುಗಡೆಯಾಗದೇ ಇದ್ದಲ್ಲಿ, ಸಂಬಂಧಿಸಿದ ಇಲಾಖೆಯ ಕೇಂದ್ರ ಕಚೇರಿಗೆ ಪತ್ರ ಬರೆದು, ಸಮನ್ವಯ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ನಗರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವಸತಿನಿಲಯಗಳಲ್ಲಿ ಕಳಪೆ ಹಾಗೂ ರುಚಿ ಇಲ್ಲದ ಊಟ ನೀಡಲಾಗುತ್ತಿದೆ ಎಂಬುದರ ಬಗ್ಗೆ ಗಮನಕ್ಕೆ ಬಂದಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಲು ಆಯಾ ಅಧಿಕಾರಿಗಳು ವಾರದಲ್ಲಿ ಒಂದು ಬಾರಿ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಅನುಷ್ಠಾನದ ಪರಿಣಾಮ ಮತ್ತು ಗುಣಮಟ್ಟದ ಬಗ್ಗೆ ಸಾಮಾಜಿಕ ಪರಿಶೋಧನೆ ಮತ್ತು ಮೌಲ್ಯಮಾಪನವನ್ನು ಸಹ ಮಾಡಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಕೆಲ ಕಾಮಗಾರಿಗಳು ಹಾಗೂ ಪೂರ್ಣಗೊಂಡದೆ ಇರುವ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ತಮಗೆ ನೀಡಿದ ಕಾಮಗಾರಿಗಳ ಸಕಾಲದಲ್ಲಿ ಪೂರ್ಣಗೊಳಿಸಬೇಕು ಮತ್ತು ಆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ತಪ್ಪಿದಲ್ಲಿ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಕೌಶಲ್ಯ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಆಹಾರ ಇಲಾಖೆ ಹಾಗೂ ನಗರಾಭಿವೃದ್ಧಿ, ಸಣ್ಣ ಕೈಗಾರಿಕೆಗೆ ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಅನುದಾನ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.