ಬಳ್ಳಾರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಂಕಲ್ಪದಂತೆ, ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ, ಸ್ವಚ್ಛ ಮತ್ತು ಸ್ವಸ್ಥ್ಯ ನವ ಬಳ್ಳಾರಿ ನಿರ್ಮಾಣಕ್ಕೆ ಕಂಕಣ ಬದ್ಧರಾಗೋಣ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕರೆ ನೀಡಿದರು.
ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಸ್ಮರಣಾರ್ಥವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛತೆಯೇ ಸೇವೆಯಡಿ ನಗರದ ಎಪಿಎಂಸಿ ಯಾರ್ಡ್ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ವಚ್ಛತೆಯ “ಶ್ರಮದಾನ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರ ಕನಸಿನ ಸ್ವಚ್ಛ ಭಾರತವನ್ನು ಇಂದು ನಾವೆಲ್ಲರೂ ಸೇರಿ ನನಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಇದು ಈ ದಿನಕ್ಕೆ ಸೀಮಿತವಾಗದೇ, ವಾರಕ್ಕೊಮ್ಮೆ ಜನ ಪ್ರತಿನಿಧಿಗಳು ಹಾಗೂ ಜನರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ ವಾರ್ಡ್‍ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಬಳ್ಳಾರಿಯನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡುವ ಸಂಕಲ್ಪ ಹೊಂದಿದ್ದೇವೆ. ಸ್ವಚ್ಛನಗರ ಪ್ರಶಸ್ತಿಗೆ ಭಾಜನವಾಗಿರುವ ಮೈಸೂರು ಮಾದರಿಯಲ್ಲಿ ಬಳ್ಳಾರಿಯನ್ನು ಕೂಡ ಮಾದರಿ ನಗರವನ್ನಾಗಿ ಮಾಡಲು ನಾವೆಲ್ಲರೂ ಜೊತೆಗೂಡಿ ಶ್ರಮಿಸಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯಸಭಾ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್
ಡಿ.ತ್ರಿವೇಣಿ, ಉಪ ಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.