17.1 C
New York
Sunday, September 8, 2024

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಪ್ರವಾಹ ಹಾನಿ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ : ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದ್ದು, ಮುಂದಾಗಬಹುದಾದ ಸಂಭವನೀಯ ಪ್ರವಾಹ, ಬೆಳೆ ಹಾನಿ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚನೆ ನೀಡಿದರು.
ಅವರು, ಮಂಗಳವಾರದಂದು ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಭವನೀಯ ಪ್ರವಾಹ ಎದುರಿಸಲು ಎಲ್ಲಾ ತಾಲ್ಲೂಕು ತಹಶೀಲ್ದಾರರು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಳೆಯಿಂದಾಗಿ ಹಾನಿ ಅಥವಾ ಪ್ರವಾಹ ಉಂಟಾದರೆ, ಹಾನಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಂಡು ಸಮರ್ಥವಾಗಿ ನಿರ್ವಹಿಸಬೇಕು ಎಂದರು.
ಯಾವುದೇ ಕ್ಷಣದಲ್ಲಾದರೂ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವ ಸಾಧ್ಯತೆ ಇದ್ದು, ನದಿ ಪಾತ್ರದ ಗ್ರಾಮಗಳಿಗೆ ಡಂಗೂರ ಮೂಲಕ ಹೆಚ್ಚಿನ ಮುಂಜಾಗ್ರತೆ ನೀಡಬೇಕು ಎಂದು ತಿಳಿಸಿದರು.
ಬಳ್ಳಾರಿ, ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳು ಹಗರಿ ಮತ್ತು ವೇದಾವತಿ ನದಿಗಳಿಗೆ ಹೊಂದಿಕೊಂಡಿದ್ದು, ಅಪಾಯ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ನೀಡಬೇಕು. ಅಲ್ಲಿನ ಮಕ್ಕಳು, ವಯಸ್ಕರು, ಜಾನುವಾರುಗಳನ್ನು ಆಯಾ ಗ್ರಾಮಾಡಳಿತಾಧಿಕಾರಿಗಳ ಸಹಯೋಗದೊಂದಿಗೆ ಗಣತಿ ಮಾಡಿಕೊಂಡು ಇಟ್ಟುಕೊಂಡಿರಬೇಕು ಎಂದು ತಹಶೀಲ್ದಾರರುಗಳಿಗೆ ನಿರ್ದೇಶನ ನೀಡಿದರು.
ಒಂದು ವಾರದೊಳಗಾಗಿ ಪ್ರವಾಹ ಹಾನಿಯಾಗುವಂತಹ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಕಾಳಜಿ ಕೇಂದ್ರಗಳನ್ನು ತೆರೆಯಲು ಸ್ಥಳ ಗುರುತಿಸುವುದು, ಇತರೆ ಪೂರಕ ದಾಸ್ತಾನು ಸಜ್ಜುಮಾಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ಜನ ಜನವಾರುಗಳಿಗೆ ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯ ಅಂತರ್‍ರಾಜ್ಯ ಗಡಿ ವ್ಯಾಪ್ತಿಯಲ್ಲಿ ಬರುವ ಹಗರಿ (ವೇದಾವತಿ), ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆ ಹಾಗೂ ಕಂಪ್ಲಿ ಸೇತುವೆಗಳ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು ಎಂದರು.
ಮಾನ್ಸೂನ್ ಪ್ರಾರಂಭವಾಗಿರುವುದರಿಂದ ಅಲ್ಲಲ್ಲಿ ಮಳೆ ನೀರು ನಿಂತು ಸಾಂಕ್ರಾಮಿಕ ರೋಗಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಈ ಕುರಿತು ಡೆಂಗ್ಯೂ, ಮಲೇರಿಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ವಿಪತ್ತು ನಿರ್ವಹಣೆಗೆ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅನುಕೂಲ ಕಲ್ಪಿಸುವ ಹಾಗೂ ಸಹಕಾರಿಯಾಗುವ ನಿಟ್ಟಿನಲ್ಲಿ ವಿಪತ್ತುಗಳು ಎದುರಾದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಡಳಿತವು ಈಗಾಗಲೇ ಬೋಟ್ ಸೇರಿದಂತೆ ಅಗತ್ಯ ಸಲಕರಣೆ (ಲೈಫ್ ಜಾಕೇಟ್) ಗಳನ್ನು ಇರಿಸಿದೆ. ರಕ್ಷಣಾ ಸಾಮಗ್ರಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿಪತ್ತು ನಿರ್ವಹಣೆ ಮಾಡುವಂತೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಸೇರಿದಂತೆ ಕೃಷಿ, ತೋಟಗಾರಿಕೆ, ನೀರಾವರಿ, ಲೋಕೋಪಯೋಗಿ, ಆರ್‍ಡಿಪಿಆರ್, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ತಹಶೀಲ್ದಾರರು ಭಾಗವಹಿಸಿದ್ದರು. ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಸೇರಿದಂತೆ ಕೃಷಿ, ತೋಟಗಾರಿಕೆ, ನೀರಾವರಿ, ಲೋಕೋಪಯೋಗಿ, ಆರ್‍ಡಿಪಿಆರ್, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ತಹಶೀಲ್ದಾರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles